ಬೆಂಗಳೂರು,ಅ.18 :ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಪ್ರವರ್ಗ-2 ಎ ಅಡಿ ಮೀಸಲಾತಿ ನೀಡಬೇಕೆಂಬ ಬೇಡಿಕೆ ಕುರಿತು ಕಾನೂನು ಪ್ರಕಾರ, ಸಂವಿಧಾನದ ಆಶಯಕ್ಕೆ ಅನುಗುಣವಾಗಿ ತೀರ್ಮಾನ ಕೈಗೊಳ್ಳಲಾಗುವುದು. ಆದರೆ ಉಪಚುನಾವಣೆ ಇರುವುದರಿಂದ ಸದ್ಯಕ್ಕೆ ಅದು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದ ನಿಯೋಗದೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಮುಖ್ಯಮಂತ್ರಿ, ಸರ್ಕಾರ ಮೀಸಲಾತಿ ವಿಷಯದಲ್ಲಿ ಮುಕ್ತಮನಸ್ಸು ಹೊಂದಿದೆ. ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿದೆ. ಎಲ್ಲಾ ದುರ್ಬಲ ವರ್ಗದವರಿಗೂ ನ್ಯಾಯ ದೊರೆಯಬೇಕು ಎಂಬುವುದು ನಮ್ಮ ಸರ್ಕಾರದ ನಿಲುವು ಎಂದರು.
ಶಾಶ್ವತ ಹಿಂದುಳಿದ ವರ್ಗಗಳ ಆಯೋಗವಿದೆ. ಅದರ ಅಂತಿಮ ಶಿಫಾರಸ್ಸು ಇನ್ನೂ ನಮ್ಮ ಕೈಗೆ ತಲುಪಿಲ್ಲ. ಚುನಾವಣೆ ನೀತಿ ಸಂಹಿತೆ ಇರುವುದರಿಂದ ಮೀಸಲಾತಿ ಕುರಿತಾಗಿ ಅಡ್ವೊಕೇಟ್ ಜನರಲ್, ಕಾನೂನು ಇಲಾಖೆ, ತಜ್ಞರೊಂದಿಗೆ, ಸಂಪುಟದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಈಗಲೇ ಯಾವುದೇ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಮೀಸಲಾತಿ ಕುರಿತು ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಮುಂದೆ ಪ್ರಸ್ತಾವನೆ ಸಲ್ಲಿಸಬೇಕು, ಅದರ ಶಿಫಾರಸ್ಸಿನನ್ವಯ ಕ್ರಮ ಕೈಗೊಳ್ಳಬೇಕು ಎಂದು ಈ ಹಿಂದೆ ಪಂಚಮಸಾಲಿ ಸಮುದಾಯದ ಮುಖಂಡರು ಭೇಟಿಯಾದಾಗ ನಾನು ಸಲಹೆ ನೀಡಿದ್ದೆ. ಯಾವುದೇ ತೀರ್ಮಾನ ನ್ಯಾಯಯುತವಾಗಿ ಎಲ್ಲರಿಗೂ ಒಪ್ಪಿತವಾಗು ವಂತೆ, ನ್ಯಾಯಾಲಯಕ್ಕೂ ಒಪ್ಪಿಗೆಯಾಗುವಂತಿರಬೇಕು. ಸಂವಿಧಾನದ ಆಶಯದಂತೆ ಕ್ರಮ ಕೈಗೊಳ್ಳಲಾಗುವುದು, ಯಾವುದೇ ತೀರ್ಮಾನ ಕೈಗೊಳ್ಳುವುದಿದ್ದರೂ, ಕಾನೂನು ಪ್ರಕಾರ ಪ್ರಾಮಾಣಿಕವಾಗಿ ಕೈಗೊಳ್ಳಲಾಗು ವುದು ಎಂದು ಮುಖ್ಯಮಂತ್ರಿ ಹೇಳಿದರು.
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್, ಶಿವರಾಜ ತಂಗಡಗಿ, ಶಾಸಕರುಗಳಾದ ವಿನಯ್ ಕುಲಕರ್ಣಿ, ವಿಜಯಾನಂದ ಕಾಶಪ್ಪನವರ್, ಹಾಗೂ ಸರ್ಕಾರದ ಹಿರಿಯ ಅಕಾರಿಗಳು, ಸಮುದಾಯದ 40 ಕ್ಕೂ ಹೆಚ್ಚು ಮುಖಂಡರು, ವಕೀಲರು ಮತ್ತು ಪ್ರಮುಖರು ಉಪಸ್ಥಿತರಿದ್ದರು.