ಮಂಡ್ಯ,ಡಿ.11 : ಅಗಲಿದ ಮಾಜಿ ಮುಖ್ಯಮಂತ್ರಿ, ದೇಶ ಕಂಡ ಅಪರೂಪದ ರಾಜಕಾರಣಿ ಹಾಗೂ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಎಸ್.ಎಂ. ಕೃಷ್ಣ ಅವರು ತಮ್ಮ ಹುಟ್ಟೂರು ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಪಂಚಭೂತಗಳಲ್ಲಿ ಲೀನವಾದರು. ಕುಟುಂಬಸ್ಥರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಕರುನಾಡ ಕಣ್ಮಿಣಿಗೆ ಕಣ್ಣೀರಿನ ವಿದಾಯ ಹೇಳಿದರು.
ಇಂದು ಸಂಜೆ ಬೆಂಗಳೂರು-ಮೈಸೂರು ಹೆದ್ದಾರಿ ಪಕ್ಕದಲ್ಲಿರುವ ಕಾಫಿ ಡೇ ಹತ್ತಿರದ ಖಾಲಿ ಜಾಗದಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿತು.
ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಅವರ ಪುತ್ರ ಹಾಗೂ ಎಸ್.ಎಂ.ಕೃಷ್ಣ ಅವರ ಮೊಮ್ಮಗ ಅಮರ್ಥ್ಯ ಹೆಗ್ಡೆ ತಾತನ ಚಿತೆಗೆ ಅಗ್ನಿಸ್ಪರ್ಶ ಮಾಡಿದರು.
ವೇದಬ್ರಹ್ಮ ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ ೧೫ ವೈದಿಕರ ತಂಡದಿಂದ ವಿ-ವಿಧಾನ ಕಾರ್ಯ ಗಳು ನಡೆಯಲಿವೆ. ಹಲವು ಯತಿಗಳು, ವಿವಿಧ ಮಠಗಳ ಸ್ವಾಮೀಜಿಗಳ ಸಮ್ಮುಖದಲ್ಲಿ ಕೃಷ್ಣ ಅವರ ಅಂತ್ಯಕ್ರಿಯೆ ಜರುಗಿತು.
ಇದಕ್ಕು ಮುನ್ನ ಎಸ್‌ಎಂ ಕೃಷ್ಣ ಅವರ ಪಾರ್ಥಿವ ಶರೀರಕ್ಕೆ ಆಡಳಿತ ಮತ್ತು ವಿಪಕ್ಷ ನಾಯಕರು ಅಂತಿಮ ನಮನ ಸಲ್ಲಿಸಿದರು.
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೇಂದ್ರ ಸಚಿವರಾದ ಎಚ್‌ಡಿ ಕುಮಾರಸ್ವಾಮಿ ಹಾಗೂ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಸಚಿವ ಚಲುವರಾಯಸ್ವಾಮಿ, ವಿಧಾನಸಭೆ ಸ್ಪೀಕರ್ ಯುಟಿ ಖಾದರ್, ಸಿಟಿ ರವಿ, ನಿರ್ಮಲಾ ನಂದನಾಥಶ್ರೀ, ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಸೇರಿದಂತೆ ಅನೇಕ ಗಣ್ಯರು ಪುಷ್ಪ ನಮನ ಸಲ್ಲಿಸಿದರು.