ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ ?

Kranti Deepa
ಬೆಂಗಳೂರು,ಜೂ.04 : ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂಪುಟದಲ್ಲಿ ಸಚಿವ ಸ್ಥಾನ ಪಡೆದಿರುವ ನೂತನ ಸಚಿವರ ನಡುವೆ ಈಗ ಖಾತೆಗಾಗಿ ಫೈಟ್ ಆರಂಭವಾಗಿದ್ದು, ಬೆಂಗಳೂರು ನಗರಾಭಿವೃದ್ಧಿ ಖಾತೆಗಾಗಿ ಸಚಿವ ರಾಮಲಿಂಗಾರೆಡ್ಡಿ  ಪಟ್ಟು ಹಿಡಿದಿದ್ದಾರೆ.
ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮಾರನೇ ದಿನವೇ ಖಾತೆ ಹಂಚಿಕೆ ವಿಚಾರದಲ್ಲಿ ಅಸಮಾಧಾನ ಸ್ಪೋಟಗೊಂಡಿದ್ದು, ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡದಿದ್ದಕ್ಕೆ ಹಿರಿಯ ಸಚಿವ ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್‌ನ ಪ್ರಭಾವಿ ಹಾಗೂ ಹಿರಿಯ ನಾಯಕರಾಗಿರುವ ರಾಮಲಿಂಗಾರೆಡ್ಡಿ ಅವರು ಬೆಂಗಳೂರು ನಗರಾಭಿವೃದ್ಧಿ ಖಾತೆ ಮೇಲೆ ಕಣ್ಣಿಟ್ಟಿದ್ದರು. ಆದರೆ, ಅವರಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ಕೊಡದೆ ಜಲ ಸಂಪನ್ಮೂಲ ಖಾತೆ ಹಂಚಿಕೆ ಮಾಡಿದ್ದು, ಇದು ರಾಮಲಿಂಗಾರೆಡ್ಡಿ ಅವರ ಅಸಮಾಧಾನಕ್ಕೆ ಕಾರಣವಾಗಿದೆ.
ಹೀಗಾಗಿ ಇಂದು ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ಕೊಟ್ಟರೆ ಬೆಂಗಳೂರು ನಗರಾ ಭಿವೃದ್ಧಿ ಖಾತೆ ಕೊಡಿ, ಇಲ್ಲದಿದ್ದರೇ ಸಚಿವ ಸ್ಥಾನವೇ ಬೇಡ ಎಂದು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಅಲ್ಲದೆ ಸಚಿವ ಸ್ಥಾನಕ್ಕೆ ರಾಜೀನಾಮೆ ಸಹ ಸಲ್ಲಿಸಿದ್ದಾರೆ ಎನ್ನಲಾಗಿದೆ.

Share This Article
";