ಬೆಂಗಳೂರು,ಸೆ.2:ಕೆಎಎಸ್ 40 ಹುದ್ದೆಗಳೂ ಸೇರಿದಂತೆ ಗೆಜೆಟೆಡ್ ಪ್ರೊಬೇಷನರಿ384 ಹುದ್ದೆಗಳ ನೇಮಕಾತಿಗೆ ಎರಡು ತಿಂಗಳ ಒಳಗೆ ಮತ್ತೆ ಪೂರ್ವಭಾವಿ ಪರೀಕ್ಷೆ ನಡೆಸುವಂತೆ ಕರ್ನಾಟಕ ಲೋಕಸೇವಾ ಆಯೋಗಕ್ಕೆ (ಕೆಪಿಎಸ್‌ಸಿ) ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲಾದ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯ ಆಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್‌ಸಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ಕರ್ತವ್ಯ ಲೋಪವೆಸಗಿದ ಅಕಾರಿಗಳನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ. ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಪಕವಾಗಿ ನಡೆಸಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ನಾವು ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆ ಮತ್ತು ನಂಬಿಕಾರ್ಹತೆಯನ್ನು ಎತ್ತಿಹಿಡಿದು, ಪರೀಕ್ಷಾರ್ಥಿಗಳ ಹಿತರಕ್ಷಿಸಲು ಬದ್ಧರಾಗಿದ್ದೇವೆ ಎಂದು ಅವರು ಹೇಳಿದ್ದಾರೆ.
ಆಗಸ್ಟ್ 27 ರಂದು ನಡೆದ ಪೂರ್ವಭಾವಿ ಪರೀಕ್ಷೆಯ ಕನ್ನಡ ಪ್ರಶ್ನೆಪತ್ರಿಕೆಯ ಭಾಷಾಂತರದಲ್ಲಿ ೫೦ಕ್ಕೂ ಹೆಚ್ಚು ತಪ್ಪುಗಳಿದ್ದವು. ಇಂಗ್ಲಿಷ್‌ನಿಂದ ಕನ್ನಡಕ್ಕೆ ಭಾಷಾಂತರಿಸಿದ್ದ ಹಲವು ಪದಗಳು ತದ್ವಿರುದ್ಧ, ಅಪಾರ್ಥ ಕೊಡುವಂತೆ ಇದ್ದವು.
ಭಾಷಾಂತರದಲ್ಲಿನ ಸಮಸ್ಯೆಯಿಂದ ಕನ್ನಡ ಅಭ್ಯರ್ಥಿಗಳಿಗೆ ಅನ್ಯಾಯ ವಾಗಿದೆ. ಹೀಗಾಗಿ, ಮರು ಪರೀಕ್ಷೆ ನಡೆಸಬೇಕು ಎಂದು ಕನ್ನಡಪರ ಸಂಘಟ ನೆಗಳು, ಸಾಹಿತಿಗಳೂ ಆಗ್ರಹಿಸಿದ್ದರು. ಕನ್ನಡ ರಕ್ಷಣಾ ವೇದಿಕೆಯು ನಗರದ ಫ್ರೀಡಂ ಪಾರ್ಕ್‌ನಲ್ಲಿ ಸೋಮವಾರ ಪ್ರತಿಭಟನೆ ಹಮ್ಮಿಕೊಂಡಿದ್ದು, ಅಭ್ಯರ್ಥಿ ಗಳ ಸಹಿತ ನೂರಾರು ಮಂದಿ ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.