ಶಿವಮೊಗ್ಗ , ಏ.09 : ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಮೈದಾನದ ವಿವಾದ ಸುಖಾಂತ್ಯ ಕಂಡಿದೆ. ಬ್ಯಾರಿಕೇಡ್‌ಗಳನ್ನು ತೆರವುಗೊಳಿಸಿ ನಾಳೆಯಿಂದ ವಾಹನ ಪಾರ್ಕಿಂಗ್‌ಗೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಈ ಕುರಿತು ವಾಟ್ಸಪ್ ಮೂಲಕ ಮಾಧ್ಯಮಗಳ ಜೊತೆಗೆ ಮಾಹಿತಿ ಹಂಚಿಕೊಂಡಿರುವ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಬ್ಯಾರಿಕೇಡ್‌ಗಳ ತೆರವು ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಮೈದಾನದ ವಿವಾದ ಸೌಹಾರ್ದಯುತವಾಗಿ ಬಗೆಹರಿದಿದೆ.
ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಅವರ ಬೇಡಿಕೆಗಳನ್ನು ಆಲಿಸಲಾಗಿದೆ. ಸಿಸಿ ಕ್ಯಾಮರಾ ಅಳವಡಿಕೆ, ಬೆಳಕಿನ ವ್ಯವಸ್ಥೆ, ಸ್ವಚ್ಛತೆ ಕಾಪಾಡಬೇಕು ಎಂಬ ಬೇಡಿಕೆಗಳಿದ್ದವು. ಅವುಗಳಿಗೆ ಆಡಳಿತ ಒಪ್ಪಿಗೆ ನೀಡಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ತಿಳಿಸಿದ್ದಾರೆ. ನಾಳೆ ಬೆಳಗ್ಗೆ 10 ಗಂಟೆಯಿಂದ ಮೈದಾನ ಸಾರ್ವಜನಿಕ ಬಳಕೆಗೆ ಲಭ್ಯವಾಗಲಿದೆ. ವಾಹನಗಳ ಪಾರ್ಕಿಂಗ್ ಮಾಡಬಹುದಾಗಿದೆ. ಸಮಸ್ಯೆ ಪರಿಹಾರಕ್ಕೆ ಸಹಕರಿಸಿದ ಎಲ್ಲರಿಗು ಧನ್ಯವಾದ ಎಂದು ತಿಳಿಸಿದ್ದಾರೆ.